ಬಂಗಾಳಿಗರನ್ನು ಬೇರ್ಪಡಿಸಲು ಯತ್ನಿಸುವವರು ನರಕಕ್ಕೆ ಹೋಗಲಿ: ಮಮತಾ ಬ್ಯಾನರ್ಜಿ
ಕೋಲ್ಕತ್ತ: ವಿಧಾನಸಭೆ ಚುನಾವಣೆಗೂ ಮುನ್ನ ಎಸ್‌ಐಆರ್ ಮಾಡುವ ಮೂಲಕ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವು ನಾಗರಿಕರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಬಯಸುತ್ತಿದೆ. ಆದರೆ, ಅದಕ್ಕೆ ನಾವು ಬಿಡುವುದಿಲ್ಲ. ಕೊನೆಯವರೆಗೂ ಹೋರಾಟ ಮಾಡುತ್ತೇವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೋಲ್ಕತ್ತದ ರೆಡ್ ರೋಡ್‌ನಲ್ಲಿ ರಂಜಾನ್ ಪ್ರಾರ್ಥನೆ ನಡೆದ ನಂತರ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ.
ಬಂಗಾಳವನ್ನು ಗುರಿಯಾಗಿಸಿಕೊಂಡಿರುವ ಹಾಗೂ ಇಲ್ಲಿನ ಜನರನ್ನು ಬೇರ್ಪಡಿಸುವ ಪ್ರಯತ್ನ ಮಾಡುವವರು ನರಕಕ್ಕೆ ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ನಿಮ್ಮ ಮತದಾನದ ಹಕ್ಕನ್ನು ಮೋದಿಯವರಾಗಲಿ ಅಥವಾ ಬಿಜೆಪಿಯವರಾಗಲಿ ಕಿತ್ತುಕೊಳ್ಳಲು ನಾವು ಬಿಡುವುದಿಲ್ಲ.
ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ನಾಗರಿಕರ ಹಕ್ಕುಗಳನ್ನು ಕಾಪಾಡಲು ನಾವು ಕೊನೆಯವರೆಗೂ ಹೋರಾಟ ಮಾಡುತ್ತೇವೆ’ ಎಂದು ಹೇಳಿದ್ದಾರೆ. ಎಸ್‌ಐಆರ್ ನೆಪದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕಿತ್ತುಹಾಕಲಾಗಿದೆ. ಇದು ಚುನಾವಣೆಯ ಮೇಲೆ ಪ್ರಭಾವ ಬೀರುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.
ಬಂಗಾಳವು ಏಕತೆಯಲ್ಲಿ ನಂಬಿಕೆಯಿಟ್ಟುಕೊಂಡಿದೆ. ಇಲ್ಲಿ ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತರು ಒಟ್ಟಾಗಿ ಜೀವನ ನಡೆಸುತ್ತಿದ್ದಾರೆ. ಈ ಸಮಾಜವನ್ನು ಒಡೆಯಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆಗೂ ಮುನ್ನ ಎಸ್‌ಐಆರ್ ನಡೆಸುತ್ತಿರುವುದರ ವಿರುದ್ಧ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವು ಮೊದಲಿನಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಾ ಬಂದಿದೆ.