ನಾಮಪತ್ರ ಸಲ್ಲಿಕೆ ವೇಳೆ ಜಾಗ್ರತೆ: ಟಿಎಂಸಿ ಅಭ್ಯರ್ಥಿಗಳಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮಹತ್ವದ ಎಚ್ಚರಿಕೆ ನೀಡಿದ್ದಾರೆ.
ಚುನಾವಣಾ ಆಯೋಗವು ಹೊಸದಾಗಿ ನೇಮಕ ಮಾಡಿರುವ ಅಧಿಕಾರಿಗಳು ಟಿಎಂಸಿ ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕರಿಸುವ ಸಾಧ್ಯತೆಯಿದೆ, ಆದ್ದರಿಂದ ನಾಮಪತ್ರ ಸಲ್ಲಿಕೆ ವೇಳೆ ಅತ್ಯಂತ ಜಾಗರೂಕತೆಯಿಂದ ಇರಬೇಕು ಎಂದು ಅವರು ಸೂಚಿಸಿದ್ದಾರೆ.
ಬೀರಭೂಮ್ ಜಿಲ್ಲೆಯ ನಾನೂರ್‌ನಲ್ಲಿ ನಡೆದ ಬೃಹತ್ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, "ಇಲ್ಲಿ ಎಲ್ಲವನ್ನೂ ಬದಲಾಯಿಸಲಾಗಿದೆ, ಇದೊಂದು ಹೊಸ ವ್ಯವಸ್ಥೆ.
ಚುನಾವಣಾ ಆಯೋಗ ನೇಮಿಸಿರುವ ಹೊಸ ಅಧಿಕಾರಿಗಳಿಗೆ ನಿಮ್ಮ ನಾಮಪತ್ರಗಳನ್ನು ತಿರಸ್ಕರಿಸುವ ಜವಾಬ್ದಾರಿ ನೀಡಲಾಗಿದೆ. ಆದ್ದರಿಂದ ಸಣ್ಣ ತಪ್ಪುಗಳೂ ಆಗದಂತೆ ಎಚ್ಚರಿಕೆ ವಹಿಸಿ ಎಂದು ಅಭ್ಯರ್ಥಿಗಳಿಗೆ ಹೇಳಿದರು.
ಬಿಜೆಪಿ ವಿರುದ್ಧ ವಾಗ್ದಾಳಿ: ಕೇಂದ್ರದ ಬಿಜೆಪಿ ಸರ್ಕಾರವು ರಾಜಕೀಯ ಲಾಭಕ್ಕಾಗಿ ಚುನಾವಣಾ ಆಯೋಗ ಮತ್ತು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ಕಿಡಿಕಾರಿದರು. ಬಿಜೆಪಿ ಮಹಿಳಾ ವಿರೋಧಿ ಪಕ್ಷವಾಗಿದೆ. ತರ್ಕಬದ್ಧವಲ್ಲದ ಕಾರಣಗಳನ್ನು ನೀಡಿ ಮಹಿಳೆಯರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತಿದೆ. ಆದ್ದರಿಂದ ಮಹಿಳೆಯರು ಬಿಜೆಪಿಗೆ ಮತ ಹಾಕಬಾರದು ಎಂದು ಮನವಿ ಮಾಡಿದರು. ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23 ಮತ್ತು ಏಪ್ರಿಲ್ 29 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.