ಬಂಗಾಳದಲ್ಲಿ ನುಸುಳುಕೋರರನ್ನು ಮಮತಾ ಬ್ಯಾನರ್ಜಿ ಸ್ವಾಗತಿಸುತ್ತಿದ್ದಾರೆ: ಅಸ್ಸಾಂ ಸಿಎಂ
ಕಲ್ಚಿನಿ (ಪಶ್ಚಿಮ ಬಂಗಾಳ): ಅಸ್ಸಾಂ ಮತ್ತು ತ್ರಿಪುರಾದಲ್ಲಿನ ಬಿಜೆಪಿ ಸರ್ಕಾರಗಳು ಬಾಂಗ್ಲಾದೇಶದಿಂದ ನುಸುಳುಕೋರರು ಬರುವುದನ್ನು ಕಟ್ಟುನಿಟ್ಟಾಗಿ ತಡೆಯುತ್ತಿವೆ. ಆದರೆ, ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನುಸುಳುಕೋರರನ್ನು ಆತ್ಮೀಯವಾಗಿ ಸ್ವಾಗತಿಸುತ್ತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಅಲಿಪುರ್ದುವಾರ್ ಜಿಲ್ಲೆಯ ಕಲ್ಚಿನಿಯಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರವು ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬೇಲಿ ನಿರ್ಮಿಸಲು ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ಅಕ್ರಮ ವಲಸೆ ಹೆಚ್ಚುತ್ತಿದೆ. ವೋಟು ಬ್ಯಾಂಕ್ ರಾಜಕಾರಣಕ್ಕಾಗಿ ಮಮತಾ ಬ್ಯಾನರ್ಜಿ ಅವರು ದೇಶದ ಭದ್ರತೆಯನ್ನು ಪಣಕ್ಕಿಟ್ಟಿದ್ದಾರೆ ಎಂದು ಕಿಡಿಕಾರಿದರು.
ಬಂಗಾಳದಲ್ಲಿ ಅಕ್ರಮ ವಲಸೆಯಿಂದಾಗಿ ಜನಸಂಖ್ಯಾ ಸಮತೋಲನ ಏರುಪೇರಾಗುತ್ತಿದೆ ಎಂದು ಆರೋಪಿಸಿದ ಅವರು, "ರಾಜ್ಯದಲ್ಲಿ ಹಿಂದೂಗಳ ಜನಸಂಖ್ಯೆ ಕ್ಷೀಣಿಸುತ್ತಿದೆ ಮತ್ತು ಬಾಂಗ್ಲಾದೇಶದ ಮುಸ್ಲಿಂ ನುಸುಳುಕೋರರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಬಂಗಾಳದ ಭವಿಷ್ಯಕ್ಕೆ ದೊಡ್ಡ ಅಪಾಯ ಎಂದು ಎಚ್ಚರಿಸಿದರು. ಇದೇ ವೇಳೆ ಅಸ್ಸಾಂ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆಯೂ ಮಾತನಾಡಿದ ಶರ್ಮಾ, "ಅಸ್ಸಾಂನಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಮೇ 4 ರಂದು ಫಲಿತಾಂಶ ಹೊರಬಂದಾಗ 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ನೂರಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ 'ಶತಕ' ಬಾರಿಸಲಿದೆ," ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಏ. 23 ಮತ್ತು ಏ. 29 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.