ಕಾರ್ಯಕರ್ತರಿಗೆ ಸಿಗಲ್ಲ: ಪ್ರದೀಪ್ ಈಶ್ವರ್ ವಿರುದ್ಧ ಕಾಂಗ್ರೆಸ್ ಮುಖಂಡರ ವಾಗ್ದಾಳಿ
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ ಕಾಂಗ್ರೆಸ್ ಮುಖಂಡರ ಆಕ್ರೋಶ ಮತ್ತೊಮ್ಮೆ ಸ್ಪೋಟಿಸಿದೆ. ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿದ ಮುಖಂಡರು, ಸ್ವಪಕ್ಷದ ಶಾಸಕರ ವಿರುದ್ಧವೇ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ನಾವು ಕಾಂಗ್ರೆಸ್ ಪಕ್ಷದಲ್ಲಿರುವ ಕಾರಣ ಚಿಕ್ಕಬಳ್ಳಾಪುರ ಅಭಿವೃದ್ಧಿಯ ವಿಚಾರವಾಗಿ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಶಾಸಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಕರ್ನಾಟಕ ಹಾಲು ಮಹಾ ಮಂಡಲ ನಿರ್ದೇಶಕ ಎನ್.ಸಿ.ವೆಂಕಟೇಶ್, ‘ಶಾಸಕರು ತಮ್ಮ ವರ್ತನೆ ಬದಲಿಸಿಕೊಳ್ಳುವರು, ಸರಿ ಹೋಗುವರು ಎಂದು ಇಷ್ಟು ದಿನಗಳ ಕಾಲ ಸುಮ್ಮನೆ ಇದ್ದೆವು.
ಆದರೆ ಅವರ ವರ್ತನೆಗಳು ಬದಲಾಗುತ್ತಲೇ ಇಲ್ಲ. ಕಾಂಗ್ರೆಸ್ ಕಾರ್ಯಕರ್ತರಿಗೆ ಅವರು ಲಭ್ಯವಾಗುತ್ತಿಲ್ಲ. ಮುಖಂಡರಿಗೂ ಸ್ಪಂದಿಸುತ್ತಿಲ್ಲ ಎಂದರು. ಚಿಕ್ಕಬಳ್ಳಾಪುರ ನಗರಸಭೆಯಲ್ಲಿ 18 ಮಂದಿ ಕಾಂಗ್ರೆಸ್ ಸದಸ್ಯರು ಇದ್ದರೂ ಪಕ್ಷವು ಅಧಿಕಾರ ಹಿಡಿಯಲು ಸಾಧ್ಯವಾಗಲಿಲ್ಲ. ಪಿಎಲ್‌ಡಿ ಬ್ಯಾಂಕ್ ಚುನಾವಣೆ, ಟಿಎಪಿಸಿಎಂಎಸ್ ಚುನಾವಣೆಯಲ್ಲಿಯೂ ಗೆಲ್ಲಲು ಆಗಲಿಲ್ಲ. ಒಬ್ಬರನ್ನು ಮತ್ತೊಬ್ಬರ ವಿರುದ್ಧ ಎತ್ತಿಕಟ್ಟಿ ಸಮುದಾಯಗಳನ್ನು ವಿಘಟಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಚಿಕ್ಕಬಳ್ಳಾಪುರದ ಪರಿಶಿಷ್ಟ ಕಾಲೊನಿ ಅಭಿವೃದ್ಧಿಗೆ ಮಂಜೂರಾಗಿರುವ ₹ 3 ಕೋಟಿಯನ್ನು ಚಿಂತಾಮಣಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ಶಾಸಕರು ಸಮಾಜ ಕಲ್ಯಾಣ ಸಚಿವರಿಗೆ ಪತ್ರ ಬರೆದಿದ್ದಾರೆ ಎನ್ನುವುದು ತಿಳಿಯಿತು.
ಆದರೆ ಅಂತಹ ಸಣ್ಣ ಕೆಲಸವನ್ನು ಸಚಿವರು ಮಾಡಿಲ್ಲ ಎಂದರು. ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ₹ 10 ಕೋಟಿ, ನಂದಿ ವೈದ್ಯಕೀಯ ಶಿಕ್ಷಣ ಕಾಲೇಜಿನ ಕಟ್ಟಡ ಕಾಮಗಾರಿ ಪೂರ್ಣಕ್ಕೆ ₹ 340 ಕೋಟಿ, ಕಾಲೇಜಿನ ವೈದ್ಯಕೀಯ ಉಪಕರಣ ಖರೀದಿಗೆ ₹ 40 ಕೋಟಿ ಮಂಜೂರು ಮಾಡಿಸಿದ್ದಾರೆ ಎಂದರು. ಡಾ.ಎಂ.ಸಿ.ಸುಧಾಕರ್, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರು ಮಾಡಿಸಿರುವ ಕಾಮಗಾರಿಗಳು ಮತ್ತು ಯೋಜನೆಗಳ ವಿವರ ನೀಡಿದರು.