Select Location
All Locations
State
Region
City / District
ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ: ಸಚಿವ ದಿನೇಶ್ ಗುಂಡೂರಾವ್

ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ: ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ (ಏ.28): ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನರ್‌ ರಚನೆ ಅಗತ್ಯವಿದ್ದು, ಇತರರಿಗೆ ಕೂಡ ಅವಕಾಶ ಸಿಗಬೇಕು. ಈ ಬಗ್ಗೆ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಸಂಪುಟ ವಿಸ್ತರಣೆ ಆಗುವ ನಿರೀಕ್ಷೆಯಿದೆ. ಪಕ್ಷ ಏನೇ ತೀರ್ಮಾನ ಕೈಗೊಂಡರೂ ನಾವು ಅದಕ್ಕೆ ಬದ್ಧರಾಗಿದ್ದೇವೆ.

ಪ್ರತಿಯೊಬ್ಬರಲ್ಲೂ ದೊಡ್ಡತನ ಇರಬೇಕು ಎಂದು ಹೇಳಿದರು. ಯಾವಾಗ ಏನಾಗಬೇಕೋ ಅದಾಗುತ್ತದೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು. ಕೋವಿಡ್ ಅವಧಿಯ ಹಗರಣಗಳ ಕುರಿತು ಖುನ್ನಾ ಆಯೋಗದ ತನಿಖೆ ನಡೆಯುತ್ತಿದ್ದು, ಸಾಕಷ್ಟು ದುರುಪಯೋಗ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದರೆ, ಸಾಕ್ಷಾಧಾರಗಳ ಮೇಲೆ ಕ್ರಮಕೈಗೊಳ್ಳಬೇಕಾಗಿದೆ ಎಂದರು.

ಶೀಘ್ರ ವೈದ್ಯರ ನೇಮಕ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಕುರಿತು ಮಾತನಾಡಿ, ಈಗಾಗಲೇ 225 ವೈದ್ಯರ ನೇಮಕಕ್ಕೆ ಅನುಮೋದನೆ ಸಿಕ್ಕಿದ್ದು, ಶೀಘ್ರದಲ್ಲೇ ವೈದ್ಯರು ಮತ್ತು ಸಿಬ್ಬಂದಿ ನೇಮಕಕ್ಕೆ ಕ್ರಮಕೈಗೊಳ್ಳಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಸರ್ಕಾರಿ ಔಷಧ ಮಾತ್ರ ಇರಬೇಕು. ಅಲ್ಲಿ ಜೆನರಿಕ್ ಔಷಧಿ ಮಳಿಗೆ ಮುಂದುವರಿಯಬಾರದು ಎನ್ನುವುದು ನಮ್ಮ ಉದ್ದೇಶ. ಆದರೆ, ಈ ಕುರಿತು ಕೆಲವರು ಕೋರ್ಟ್‌ ಮೆಟ್ಟಿಲು ಏರಿದ್ದಾರೆ ಎಂದರು.

ಬೇಸಿಗೆ ಹಿನ್ನೆಲೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಈಗಾಗಲೇ ಅಗತ್ಯ ಮಾರ್ಗಸೂಚಿ ನೀಡಲಾಗಿದೆ. ಹೀಟ್ ಸ್ಟ್ರೋಕ್ ಪ್ರಕರಣಗಳಿಗೆ ತುರ್ತು ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಲಾಗಿದ್ದು, ಎಲ್ಲ ಆಸ್ಪತ್ರೆಗಳಲ್ಲಿ ಬೆಡ್‌ ಮೀಸಲಿಡಲಾಗಿದೆ. ಈ ವರೆಗೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.


Asianet News 1 hour ago
Home Flash News