ಶೃಂಗೇರಿ ವಿಧಾನಸಭಾ ಕ್ಷೇತ್ರ: ಅಂಚೆ ಮತಗಳ ಮರು ಎಣಿಕೆ ಆರಂಭ
ಚಿಕ್ಕಮಗಳೂರು: ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಇಂದು ಬೆಳಿಗ್ಗೆ ಆರಂಭಗೊಂಡಿದೆ. 2023ರ ಚುನಾವಣಾ ಫಲಿತಾಂಶದ ಮೇಲೆ ನಿರ್ಣಾಯಕ ಪ್ರಭಾವ ಬೀರಲಿರುವ ಈ ಮರು ಎಣಿಕೆಯು ಹೈಕೋರ್ಟ್‌ನ ಕಟ್ಟುನಿಟ್ಟಿನ ಆದೇಶದ ಮೇರೆಗೆ ನಡೆಯುತ್ತಿದೆ. ಎಲ್ಲಿ, ಹೇಗೆ ಎಣಿಕೆ? ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಬೆಳಿಗ್ಗೆ 9 ಗಂಟೆಗೆ ಎಣಿಕೆ ಕಾರ್ಯ ಆರಂಭವಾಗಿದ್ದು, ಚುನಾವಣಾಧಿಕಾರಿ ಗೌರವಶೆಟ್ಟಿ ಅವರ ನೇತೃತ್ವದಲ್ಲಿ ಪ್ರಕ್ರಿಯೆ ನಡೆಯುತ್ತಿದೆ.
ಇವರಿಗೆ ಆರು ಜನ ಸಹಾಯಕ ಚುನಾವಣಾಧಿಕಾರಿಗಳು ಸಾಥ್ ನೀಡುತ್ತಿದ್ದಾರೆ. ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಅಭ್ಯರ್ಥಿಗಳ ಸಮ್ಮುಖದಲ್ಲೇ ಮತಗಳ ಪರಿಶೀಲನೆ ನಡೆಯುತ್ತಿದೆ. ಮರು ಎಣಿಕೆಯ ಹಾದಿ ಹೀಗಿದೆ ಒಟ್ಟು 1,822 ಅಂಚೆ ಮತಗಳ ಮರು ಎಣಿಕೆ ನಡೆಯುತ್ತಿದ್ದು, ಇದರ ಹಂತಗಳು ಇಂತಿವೆ: ಮೊದಲ ಹಂತ: ಮೊದಲು ತಿರಸ್ಕರಿಸಲಾಗಿದ್ದ 279 ಮತಗಳ ಮರು ಪರಿಶೀಲನೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಂತರದಿಂದ ಜಯಗಳಿಸಿದ್ದರು. ಆದರೆ, 1,822 ಅಂಚೆ ಮತಗಳಲ್ಲಿ 279 ಮತಗಳನ್ನು ತಿರಸ್ಕರಿಸಿದ್ದಕ್ಕೆ ಜೀವರಾಜ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಏಪ್ರಿಲ್ 6ರಂದು ಮರು ಎಣಿಕೆಗೆ ಆದೇಶಿಸಿತ್ತು.