ಸಚಿವ ಹಿರಿಯೂರು ಸುಧಾಕರ್ ನಿಧನ
ಬೆಂಗಳೂರು : ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದ ಡಿ.ಸುಧಾಕರ್ (66) ಅವರು ತೀವ್ರ ಅನಾರೋಗ್ಯದಿಂದ ಭಾನುವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೂರು ವಾರಗಳ ಹಿಂದೆ ಮಂಡಿ ಚಿಪ್ಪು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ ಆಸ್ಪತ್ರೆಗೆ ಡಿ.ಸುಧಾಕರ್ ಅವರು ದಾಖಲಾಗಿದ್ದರು. ಬಳಿಕ ಶ್ವಾಸಕೋಶದ ಸೋಂಕಿಗೆ ತುತ್ತಾಘಿದ್ದ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆರೋಗ್ಯದಲ್ಲಿ ಸುಧಾರಣೆ ಕಂಡುಬರದ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಬಳಿಯಿರುವ ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಕಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಯಲ್ಲಿ ದೇಶದ ಪ್ರಮುಖ ತಜ್ಞರು ಹಾಗೂ ವಿದೇಶಿ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ಅಂತಿಮವಾಗಿ ಭಾನುವಾರ ಬೆಳಗಿನ ಜಾವ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಆರ್. ಚಿನ್ನದುರೈ, ಸಚಿವ ಡಿ.ಸುಧಾಕರ್ ಅವರು ಭಾನುವಾರ ಬೆಳಗಿನ ಜಾವ 3.15ಕ್ಕೆ ಎಲೆಕ್ಟ್ರಾನಿಕ್ ಸಿಟಿಯ ಕೃಷ್ಣ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪ್ರಕಟಿಸಿದರು. ಸುಧಾಕರ್ ಅವರು ಪತ್ನಿ ಹರ್ಷಿಣಿ, ಒಬ್ಬ ಪುತ್ರ ಹಾಗೂ ಪುತ್ರಿ, ಅಪಾರ ಬೆಂಬಲಿಗರನ್ನು ಅಗಲಿದ್ದಾರೆ.ಮೃತರ ಅಂತ್ಯಸಂಸ್ಕಾರ ಸೋಮವಾರ ಚಳ್ಳಕೆರೆಯಲ್ಲಿ ನಡೆಯಲಿದೆ. ಹಿರಿಯ ನಾಯಕನ ಅಗಲಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 3 ದಿನಗಳ ಶೋಕಾಚರಣೆ ಘೋಷಿಸಿದೆ.