NEET UG 2026: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಕೇಂದ್ರ ಚೆಲ್ಲಾಟ: ಸಾಗರ್ ಖಂಡ್ರೆ ಕಿಡಿ
ಬೀದರ್: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಪ್ರಕ್ರಿಯೆಯಲ್ಲಿನ ಗೊಂದಲಗಳು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕುಸಿಯುವಂತೆ ಮಾಡಿದ್ದು, ಇದು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಎಸಗಿದ ದ್ರೋಹವಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶಾದ್ಯಂತ ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದ ಕನಸಿನೊಂದಿಗೆ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಕರ್ನಾಟಕವೊಂದರಲ್ಲೇ ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಗಲು-ರಾತ್ರಿ ಶ್ರಮಪಟ್ಟು ಪರೀಕ್ಷೆಗೆ ತಯಾರಾಗಿದ್ದರು. ವಿದ್ಯಾರ್ಥಿಗಳ ಜೊತೆಗೆ ಪೋಷಕರು ಕೂಡ ಮಕ್ಕಳ ಭವಿಷ್ಯಕ್ಕಾಗಿ ಅನೇಕ ತ್ಯಾಗಗಳನ್ನು ಮಾಡಿದ್ದಾರೆ. ಆದರೆ, ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುರಕ್ಷಿತವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಟೀಕಿಸಿದ್ದಾರೆ. ಪ್ರತಿ ವರ್ಷವೂ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ಹಾಗೂ ಅವ್ಯವಸ್ಥೆಗಳು ಮರುಕಳಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ಕನಸು ಮತ್ತು ದೇಶದ ಶಿಕ್ಷಣ ವ್ಯವಸ್ಥೆಯ ಗೌರವವನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಸತತವಾಗಿ ವಿಫಲವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಒಂದೆಡೆ ವಿದ್ಯಾರ್ಥಿಗಳು ವರ್ಷಪೂರ್ತಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಿದ್ದರೆ, ಇನ್ನೊಂದೆಡೆ ಸರ್ಕಾರದ ನಿರ್ಲಕ್ಷ್ಯ ಮತ್ತು ವ್ಯವಸ್ಥೆಯ ದೋಷದಿಂದ ಅವರ ಕನಸುಗಳು ಭಗ್ನಗೊಳ್ಳುತ್ತಿವೆ. ಇದು ಕೇವಲ ಆಡಳಿತಾತ್ಮಕ ವೈಫಲ್ಯವಲ್ಲ, ಬದಲಾಗಿ ದೇಶದ ಯುವಜನತೆಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದಿದ್ದಾರೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅತ್ಯಂತ ಬಲವಾದ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.