POCSO Case: ಪೊಲೀಸ್ ವಿಚಾರಣೆಗೆ ಹಾಜರಾದ ಶ್ರೀ ವಚನಾನಂದ ಸ್ವಾಮೀಜಿ
ದಾವಣಗೆರೆ: ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ (POCSO Case) ದಾಖಲಾದ ಹಿನ್ನೆಲೆಯಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತಿಗೊಂಡ ಜಗದ್ಗುರು ಶ್ರೀವಚನಾನಂದ ಸ್ವಾಮೀಜಿ ಗುರುವಾರ ಬೆಳಗ್ಗೆ ಗುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪದಚ್ಯತಿಗೊಂಡ ಪೀಠಾಧಿಪತಿ ಶ್ರೀವಚನಾನಂದ ಸ್ವಾಮೀಜಿ ವಿರುದ್ಧ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಬಾಲಕನ ತಾಯಿ ಪ್ರಕರಣ ದಾಖಲಿಸಿದ್ದರು. ಲಕ್ಷ್ಮೇಶ್ವರ ಪೊಲೀಸರು ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದರು.
ತನಿಖೆ ಕೈಗೊಂಡಿದ್ದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಶ್ರೀವಚನಾನಂದ ಸ್ವಾಮೀಜಿಗೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಲೆಕ್ಕಕೊಡಿ ಚಳವಳಿ ಸಮಿತಿ ಅಧ್ಯಕ್ಷ ಪರಮೇಶ್ವರಗೌಡ್ರು ಮತ್ತು ಸಮಾಜದ ಮುಖಂಡರೊಂದಿಗೆ ಶ್ರೀವಚನಾನಂದ ಸ್ವಾಮೀಜಿ ಗುರುವಾರ ಬೆಳಗ್ಗೆ 8.30ರ ವೇಳೆಯಲ್ಲಿ ಠಾಣೆಗೆ ಹಾಜರಾಗಿದ್ದಾರೆ. ಐದು ತಾಸುಗಳ ಕಾಲ ವಿಚಾರಣೆ ನಡೆಸುತ್ತಿರುವ ಪೊಲೀಸರು, ಬಾಲಕನ ಮೇಲೆ ದೌರ್ಜನ್ಯದ ಬಗ್ಗೆ ಶ್ರೀವಚನಾನಂದ ಸ್ವಾಮೀಜಿ ಅವರಿಗೆ ಸುಮಾರು 50ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಹೇಳಲಾಗಿದೆ.